ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾಗರಿಕ ಸೇವೆಗಳ ನೇರ ನೇಮಕಾತಿಗಾಗಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ 5 ವರ್ಷಗಳ ಕಾಲ ಸಡಿಲಿಸಲು ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ.
ಈ ನಿರ್ಧಾರವು ಡಿಸೆಂಬರ್ 31, 2027ರವರೆಗೆ ಹೊರಡಿಸಲಾಗುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗಲಿದೆ. ಕಳೆದ ಐದಾರು ವರ್ಷಗಳಲ್ಲಿ ಕೋವಿಡ್ ಸಾಂಕ್ರಾಮಿಕ ಹಾಗೂ ತಾಂತ್ರಿಕ ಕಾರಣಗಳಿಂದಾಗಿ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸುಮಾರು 2 ರಿಂದ 3 ಲಕ್ಷ ಹೆಚ್ಚುವರಿ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ.
ಪ್ರಸ್ತುತ ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಪೈಕಿ ಶಿಕ್ಷಣ ಇಲಾಖೆಯಲ್ಲಿ 45,000 ಹಾಗೂ ಪೊಲೀಸ್ ಇಲಾಖೆಯಲ್ಲಿ 15,000 ಹುದ್ದೆಗಳ ಭರ್ತಿಗೆ ಸರ್ಕಾರ ಸಜ್ಜಾಗುತ್ತಿದೆ.

No comments:
Post a Comment